ಇಡೀ ದೇಶಕ್ಕೆ ಮಾದರಿಯಾಗಿರುವ ಕರ್ನಾಟಕದ ಅಂಗನವಾಡಿ ಕೇಂದ್ರಗಳ ಉನ್ನತೀಕರಣದ ಮೊದಲ ಭಾಗವಾಗಿ ಇದೇ 22 ರಂದು ರಾಜ್ಯದ 250 ಅಂಗನವಾಡಿ ಕೇಂದ್ರಗಳಲ್ಲಿ LKG, UKG ತರಗತಿಗಳನ್ನು ಆರಂಭಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.
ಅಂಗನವಾಡಿ ಕೇಂದ್ರಗಳಲ್ಲೇ LKG, UKG ತರಗತಿಗಳನ್ನು ತೆರಯಲಾಗುವುದು, ಜೊತೆಗೆ ಮಕ್ಕಳಿಗೆ ಇಲಾಖೆ ವತಿಯಿಂದಲೇ ಬ್ಯಾಗ್, ಪುಸ್ತಕ ಹಾಗೂ ಸಮವಸ್ತ್ರಗಳನ್ನು ವಿತರಿಸಲಾಗುವುದು ಎಂದರು.
ಸಮಾಜಕ್ಕೆ ಅಂಗನವಾಡಿ ಕೊಡುಗೆ ಅಪಾರ. ಕಳೆದ 50 ವರ್ಷಗಳಿಂದ ಅಂಗನವಾಡಿ ಕೇಂದ್ರಗಳು ಉತ್ತಮವಾಗಿ ಕಾರ್ಯನಿರ್ವಹಿಸಿಕೊಂಡು ಬರುತ್ತಿವೆ. ಇನ್ಮುಂದೆ ಗವರ್ನಮೆಂಟ್ ಮಾಂಟೆಸ್ಸರಿ ಆಗಿ ಬದಲಾಗಲಿದ್ದು, ಇತರ ಶಾಲೆಗಳಿಗಿಂತ ನಮ್ಮ ಅಂಗನವಾಡಿ ಕೇಂದ್ರದ ಮಕ್ಕಳು ಹೆಚ್ಚು ಸುರಕ್ಷಿತವಾಗಿರುತ್ತವೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಮಕ್ಕಳಿಗೆ ಗುಣಮಟ್ಟದ ಶಿಕ್ಷಣವನ್ನು ಬಯಸುವುದು ಪ್ರತಿಯೊಬ್ಬ ಪಾಲಕರ ಕನಸಾಗಿರುತ್ತದೆ. ಗುಣಮಟ್ಟದ ಶಿಕ್ಷಣದ ಬಗ್ಗೆ ಶಿಕ್ಷಣ ಇಲಾಖೆ ಯೋಚಿಸುವುದು ತಪ್ಪಲ್ಲ. ಆದರೆ, ಅಂಗನವಾಡಿಗೆ ಪೆಟ್ಟು ಬೀಳಬಾರದು. ನಾವೇ ಅಂಗನವಾಡಿ ಕೇಂದ್ರಗಳ ಉನ್ನತೀಕರಣಕ್ಕೆ ಮುಂದಾಗೋಣ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.